ಕೊಡಗು ಜಿಲ್ಲಾಡಳಿತ ವತಿಯಿಂದ 73 ನೇ ಸ್ವಾತಂತ್ರ್ಯ ದಿನಾಚರಣೆ  


ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ 73 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಗುರುವಾರ ನಡೆಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಇತರರು ಪಾಲ್ಗೊಂಡಿದ್ದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು. ಧ್ವಜಾರೋಹಣ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕಳೆದ ವಾರ ಸುರಿದ ಧಾರಾಕಾರ ಮಳೆಗೆ ಸುಮಾರು 700 ಕೋಟಿ ರೂ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ ಎಂದರು. ಅತಿವೃಷ್ಟಿ ಸಂದರ್ಭದಲ್ಲಿ ರಕ್ಷಣಾ ಪಡೆ, ಎನ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವಗಳ ವಿಭಾಗ, ಗೃಹ ರಕ್ಷಕ ದಳ ಹೀಗೆ ಹಲವು ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡು ಸುಮಾರು 4 ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿದ್ದಾರೆ ಎಂದು ಅವರು ತಿಳಿಸಿದರು. ಸದ್ಯ ನಿರಾಶ್ರಿತರಾದವರಿಗೆ ಪ್ರಥಮ ಆದ್ಯತೆಯಲ್ಲಿ ಪುರ್ನವಸತಿ ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದರು. ತೋರಾ ಗ್ರಾಮದಲ್ಲಿ ಎನ್‍ಡಿಆರ್‍ಎಫ್ ತಂಡದಿಂದ ಕಾರ್ಯಾಚಾರಣೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 
Previous Post
Next Post

0 Post a Comment: