ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಬ್ಯಾನರ್ ಬಿಡುಗಡೆ

      ಮಡಿಕೇರಿ TOC:-ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸುವ ಬ್ಯಾನರ್‍ನ್ನು ಜಿಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಶುಕ್ರವಾರ ಬಿಡುಗಡೆಗೊಳಿಸಿದರು.
      ಜಿಲ್ಲೆಯ ಕುಟ್ಟ, ಕರಿಕೆ ಮತ್ತು ಮಾಕುಟ್ಟ ಗಡಿ ಪ್ರದೇಶಗಳು ಪಕ್ಕದ ಕೇರಳ ಗಡಿಗೆ ಹೊಂದಿಕೊಂಡಿರುವುದರಿಂದ ಈ ಭಾಗದಲ್ಲಿ ಕೊರೊನಾ ವೈರಸ್ ಬಗ್ಗೆ ತೀವ್ರ ಕಟ್ಟೆಚ್ಚರ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ಗಡಿ ಭಾಗದಲ್ಲಿ ಬ್ಯಾನರ್‍ಗಳು ಸೂಕ್ತ ಅರಿವು ನೀಡಲು ಸಹಕಾರಿಯಾಗಲಿದೆ. 
      ಬ್ಯಾನರ್‍ನಲ್ಲಿ ಕೊರೊನಾ ವೈರಸ್ ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು ಮತ್ತು ಸೋಂಕಿತರಿಂದ ಅಂತರ ಕಾಯ್ದುಕೊಳ್ಳುವ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬ್ಯಾನರ್‍ಗಳನ್ನು ಬಿಡುಗಡೆ ಮಾಡಲಾಗಿದೆ.
      ಇದರಲ್ಲಿ ಕೊರೊನಾ ವೈರಸ್ ಬಗ್ಗೆ ಭಯ ಬೇಡ, ಎಚ್ಚರಿಕೆ ವಹಿಸಿ ಎಂಬ ಸಂದೇಶವನ್ನು ಒಳಗೊಂಡಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರಲ್ಲಿ ಅರಿವು ಮೂಡಿಸಲು ಇದು ಅತ್ಯಂತ ಸಹಕಾರಿಯಾಗಿದೆ.
      ಬ್ಯಾನರ್ ಬಿಡುಗಡೆ ಸಂದರ್ಭದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಆರ್.ಸಿ.ಎಚ್ ಅಧಿಕಾರಿ ಡಾ.ಗೋಪಿನಾಥ್ ಹಾಜರಿದ್ದರು.
Previous Post
Next Post

0 Post a Comment: